ಬೆಂಗಳೂರು: ಲಂಚ ಸ್ವೀಕರಿಸುವಾಗ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ಹಿನ್ನೆಲೆ ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಲೋಕಾಯುಕ್ತ ಬಿಗ್ ಶಾಕ್ ನೀಡಿದ್ದು, ವಿರೂಪಾಕ್ಷಪ್ಪ ಪುತ್ರ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇದೀಗ ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರ ತರಿಸಿದೆ. ರಾಜ್ಯ ಸರ್ಕಾರಕ್ಕೆ ಇದರಿಂದ ಆಗುವ ಮುಜಗರದಿಂದ ತಪ್ಪಿಸಿಕೊಳ್ಳುಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದು, ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮದ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು.
ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಬೆನ್ನಲ್ಲೆ ಶಾಸಕ ವಿರೂಪಾಕ್ಷಪ್ಪ ಅವರು ಕೆಎಸ್ಡಿಎಲ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ಮೇರೆಗೆ ಶಾಸಕರು ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮಾರ್ಚ್ 2 ರಂದು ನಡೆದ ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿರುವುದಿಲ್ಲ. ಇದು ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಶಡ್ಯಂತ್ರವಾಗಿರುತ್ತದೆ. ನನ್ನ ಮೇಲೆ ಆಪಾದನೆ ಬಂದಿರುವುದರಿಂದ ನಾನು ನೈತಿಕ ಹೊಣೆ ಹೊತ್ತು ಕೆ.ಎಸ್.ಡಿ.ಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆ ಅಂಗೀಕರಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.



