ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ( Rajiv Gandhi Panchayat Raj Fellowship) ಜಾರಿಗೊಳಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿದ ಅವರು, ಸರ್ಕಾರ ಹಿಂದಿನ ಬಜೆಟ್‌ನಲ್ಲಿ ಫೆಲೋಶಿಪ್ ಜಾರಿಗೆ ತರುವುದಾಗಿ ಘೋಷಿಸಿತ್ತು. ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕದಲ್ಲಿ ಸ್ಥಳೀಯ ಆಡಳಿತವನ್ನು ಬಲಪಡಿಸುವ ಉದ್ದೇಶದಿಂದ ಉತ್ಸಾಹಿ ಹಾಗೂ ಪ್ರತಿಭಾವಂತ ಯುವ ಸಮುದಾಯಕ್ಕೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸಲು ಇದೊಂದು ಸುವರ್ಣಾವಕಾಶ ಎಂದು ಹೇಳಿದ್ದಾರೆ.
ಸಾಮಾಜಿಕ ಕ್ಷೇತ್ರದಲ್ಲಿ ಆಸಕ್ತಿ ಇರುವ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಫೆಲೋಗಳು ಕಲ್ಯಾಣ ಕರ್ನಾಟಕ ಭಾಗದ ಸಾಮಾಜಿಕ, ಭೌಗೋಳಿಕ, ಆರ್ಥಿಕ ಹಾಗೂ ಆಡಳಿತಾತ್ಮಕ ಸನ್ನಿವೇಶಗಳನ್ನು ಅರ್ಥೈಸಿಕೊಂಡು ಜಿಲ್ಲಾಡಳಿತದೊಂದಿಗೆ ಕ್ರಿಯಾಶೀಲರಾಗಬೇಕಾಗುತ್ತದೆ. ಇದರ ಅಡಿಯಲ್ಲಿ 44 ಫೆಲೋಗಳು ತರಬೇತಿ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಸರ್ಕಾರದ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸುವಲ್ಲಿ ಫೆಲೋಗಳು ಆಸಕ್ತಿಯಿಂದ ಕೆಲಸ ಮಾಡಿದ್ದಾರೆ. ಈ ಉತ್ಸಾಹಿ ಫೆಲೋಗಳು ಕೆಲವೇ ತಿಂಗಳುಗಳಲ್ಲಿ ಇಂತಹ ಮಹತ್ತರವಾದ ಕೆಲಸವನ್ನು ಮಾಡಿರುವುದು ಇಲಾಖೆಗೆ ಲಾಭದಾಯಕವಾಗಿದೆ ಎಂದು ಖರ್ಗೆ ಹೇಳಿದರು.



