ಕೋಲ್ಕತ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. 48 ವರ್ಷದ ಗಂಗೂಲಿ ಆರೋಗ್ಯ ಸ್ಥಿರವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯ ತುರ್ತುವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶುಕ್ರವಾರ ಸಂಜೆ ಎಂದಿನಂತೆ ದೈಹಿಕ ಕಸರತ್ತಿನಲ್ಲಿ ತೊಡಗಿದ್ದ ವೇಳೆ ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಕುಟುಂಬ ಸದಸ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಗಂಗೂಲಿ ಕ್ಷೇಮವಾಗಿದ್ದಾರೆ. ಹೃದಯಾಘಾತದಿಂದ ಅಥವಾ ಇನ್ನಿತರ ಸಮಸ್ಯೆಯಿಂದ ಅವರಿಗೆ ಎದೆ ನೋವು ಕಾಣಿಸಿಕೊಂಡಿರುವ ಕುರಿತು ವಿವಿಧ ಪರೀಕ್ಷೆಗಳ ಮೂಲಕ ತಿಳಿಯಬೇಕಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಗಂಗೂಲಿ ಹೃದಯಾಘಾತಕ್ಕೆ ಒಳಗಾಗಿದ್ದು, ಆಂಜಿಯೋಪ್ಲಾಸ್ಟಿಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ. ಸೌರವ್ ಗಂಗೂಲಿ ಬೇಗ ಗುಣಮುಖರಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.



