ಡಿವಿಜಿ ಸುದ್ದಿ, ಬೆಂಗಳೂರು:ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿ ಹೋಗಿದ್ದ ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್, ಬಂಗಾಳ ಕೊಲ್ಲಿಯ ಮಧ್ಯ ಭಾಗದಲ್ಲಿ 5.8 ಕಿಲೋಮೀಟರ್ ಎತ್ತರದಲ್ಲಿ ಸಕ್ರ್ಯೂಲೇಷನ್ ಇದೆ. ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅಕ್ಟೋಬರ್ 21 ರಿಂದ 23 ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 20-23ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 19-23 ರವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಅಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ, ಗದಗ ಜಿಲ್ಲೆಗಳಿಗೆ ಅಕ್ಟೋಬರ್ 19-22 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ಇಂದು ಹಾಗೂ ಮಂಗಳವಾರ ಮಳೆಯಾಗುವ ಸಾಧ್ಯತೆ ಇದೆ.
ಅಕ್ಟೋಬರ್ 21, 22 ಹಾಗೂ 23ರಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಲ್ಲಿ ನಿನ್ನೆ 4 ಸೆಂ.ಮೀ. ಮಳೆಯಾಗಿದೆ. ಇಂದು ಹಾಗೂ ನಾಳೆ ಹೆಚ್ಚಿನ ಮಳೆಯಾಗಲಿದೆ.