ಬೆಂಗಳೂರು: ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಮನವಿ ಮಾಡಿದ್ದರು. ಇದಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮನವಿ ತಳ್ಳಿ ಹಾಕಿದ್ದು, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲಎಂದು ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಹಿಜಾಬ್ ಪ್ರಸ್ತಾವನೆಯು ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ವಾರ್ಷಿಕ ಪರೀಕ್ಷೆಯ ವೇಳೆ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲ. ಪಿಯು ಪರೀಕ್ಷೆಗೆ ಹಿಜಾಬ್ ಧರಿಸಿ ಬರುವುದಕ್ಕೆ ಅವಕಾಶ ನೀಡಲಾಗುವುದಿಲ್ಲ. ಅಲ್ಲದೇ ಈ ಕಾರಣಕ್ಕೆ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು ಹಾಜರಾಗುತ್ತಾರೆ ಎಂದು ನಾನು ಭಾವಿಸುವುದಿಲ್ಲವೆಂದು ತಿಳಿಸಿದ್ದಾರೆ.
ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದರು ಎಂದು ಇಲಾಖೆಯ ಮೂಲಗಳು ತಿಳಿಸಿವೆ.ಈ ಹಿಂದೆ ರಾಜ್ಯ ಸರ್ಕಾರ, ಶಾಲೆಗಳಲ್ಲಿ ಸಮವಸ್ತ್ರ ಧರಿಸಿ ಬರುವುದನ್ನು ಕಡ್ಡಾಯ ಮಾಡಿದ್ದು, ಇದನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಆ ಬಳಿಕ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಬ್ಬರು ನ್ಯಾಯಾಧೀಶರಿಂದ ಈ ಕುರಿತು ವಿಭಿನ್ನ ತೀರ್ಪು ಹೊರ ಬಿದ್ದಿತ್ತು. ಹೀಗಾಗಿ ಮತ್ತೊಂದು ಬೆಂಚ್ ಗೆ ಈ ವಿಚಾರ ವರ್ಗಾವಣೆಯಾಗಲಿದ್ದು, ಕರ್ನಾಟಕ ಹೈಕೋರ್ಟ್ ತೀರ್ಪನ್ನೇ ಅನುಸರಿಸಿಕೊಂಡು ಬರಲಾಗುತ್ತಿದೆ.