ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಏಕೈಕ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ನೇಮಿಸಲಲಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣು ಗೋಪಾಲ್, ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮೇ 20ರಂದು ಮಧ್ಯಾಹ್ನ 12:30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಜೊತೆಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.ಲೋಕಸಭೆ ಚುನಾವಣೆ ವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು.
ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸಿದ್ದರಾಮಯ್ಯ, ಈ ಹಿಂದೆ 2014ರಿಂದ 2018ರ ತನಕ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇದೀಗ ಎರಡನೇ ಬಾರಿ ಮತ್ತೆ ಮುಖ್ಯಂತ್ರಿ ಆಗುತ್ತುದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶ ಬಳಿಕ ಮುಖ್ಯಮಂತ್ರಿ ಹುದ್ದೆಗೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಸಾಕಷ್ಟು ಪೈಪೋಟಿ ನಡೆದಿತ್ತು. ಇದೀಗ ಹೈಕಮಾಂಡ್ ಅಳೆದು ತೂಗಿ ಕೊನೆಗೂ ಆಯ್ಕೆಯನ್ನು ಅಂತಿಮಗೊಳಿಸಿದೆ.



