ದಾವಣಗೆರೆ: ಜಿಲ್ಲೆಯ ಹರಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠದಲ್ಲಿ ನಾಳೆಯಿಂದ (ಫೆ.08) ಎರಡು ದಿನ ಮಹರ್ಷಿ ವಾಲ್ಮೀಕಿ ಜಾತ್ರೆ ನಡೆಯಲಿದೆ. ಇದೇ ವೇಳೆ ಸಮಾಜದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾವುದು. ಈ ಬಾರಿ ನಟ ಕಿಚ್ಚ ಸುದೀಪ್ ‘ವಾಲ್ಮೀಕಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಭಾರತೀಯ ಪರಂಪರೆಯಲ್ಲಿ ಧಾರ್ಮಿಕ ಮಠ ಮತ್ತು ಪೀಠಗಳು ಸಾಮಾಜಿಕ ಜಾಗೃತಿ ಉಂಟು ಮಾಡುತ್ತಿವೆ. ಹೀಗಾಗಿ ಜನ ಜಾಗೃತಿಗಾಗಿಯೇ ವಾಲ್ಮೀಕಿ ಗುರುಪೀಠದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಜಾತ್ರೆ ಸಮಿತಿ ಅಧ್ಯಕ್ಷ ರಮೇಶ್ ಜಾರಕಿಹೊಳಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಾಲ್ಮೀಕಿ ಜಾತ್ರೆಯ ವೇಳೆ ಮಠದ 23ನೇ ವಾರ್ಷಿಕೋತ್ಸವ, ಲಿಂಗೈಕ್ಯ ಜಗದ್ಗುರು ಪುಣ್ಯಾನಂದಪುರಿ ಸ್ವಾಮಿಗಳ 14ನೇ ಪುಣ್ಯಸ್ಮರಣೆ, ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ 13ನೇ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮಗಳು ನಡೆಯಲಿವೆ
ಇನ್ನು ಎರಡು ದಿನ ಸಹ ವೈಚಾರಿಕ ಚಿಂತನೆಯ ತಳಹದಿಯಲ್ಲಿ ಚರ್ಚೆಗಳು ನಡೆಯಲಿವೆ. ಬುಡಕಟ್ಟು ಜನಾಂಗ ಎದುರಿಸುತ್ತಿರುವ ಸವಾಲುಗಳ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಫೆ.9ರಂದು ನಡೆಯುವ ಜನಜಾಗೃತಿ ಸಮಾವೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಕಿಚ್ಚ ಸುದೀಪ್ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.
ಸಮಾರಂಭದಲ್ಲಿ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಸಂಸದರೂ ಸೇರಿದಂತೆ ಬಹುತೇಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ವಿವಿಧ ಮಠಗಳ ಸ್ವಾಮೀಜಿಗಳು ಭಾಗವಹಿಸಲಿದ್ದು, ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ ಅವರು ಕಾರ್ಯಕ್ರಮಗಳ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.