ಬೆಂಗಳೂರು : ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಮುಂದಾಗುತ್ತಿದ್ದಂತೆ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಡಿಸಿಎಂ ಲಕ್ಷ್ಮಣ್ ಸವದಿ ಮನವಿ ಮಾಡಿದ್ದರು. ಇದೀಗ ಪ್ರಾಧಿಕಾರ ರಚನೆಗೆ ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಅಕ್ಷೇಪ ವ್ಯಕ್ತಪಡಿಸಿದ್ಧಾರೆ.
ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಎಂ.ಬಿ. ಪಾಟೀಲ್, ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.16-18 ರಷ್ಟು ಲಿಂಗಾಯತರು ಇದ್ದು, ಇವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂಬುದು ಬಹು ದಿನಗಳ ಬೇಡಿಕೆಯಾಗಿದೆ. ರಾಜ್ಯದ 6.5ಕೋಟಿ ಜನಸಂಖ್ಯೆಯ ಪೈಕಿ ಲಿಂಗಾಯತರ ಜನಸಂಖ್ಯೆ ಒಂದು ಕೋಟಿಗಿಂತೂ ಹೆಚ್ಚಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ನೆರೆಯ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕೂಡ ಲಿಂಗಾಯತರಿಗೆ ಶೇ.16-18ರಷ್ಟು ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ, ಸ್ಕಾಲರ್‍ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ನೀಡುವ ಮೂಲಕ ಲಿಂಗಾಯತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಕೋರುತ್ತೇನೆ ಎಂದಿದ್ದಾರೆ.
ಕೆಲವರ ಬೇಡಿಕೆಯಂತೆ ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100-200ಕೋಟಿ ಅನುದಾನ ಒದಗಿಸಿದರೆ, ಹೆಚ್ಚಿನ ಪ್ರಯೋಜನವಾಗುವದಿಲ್ಲ. ಈ ಅಭಿವೃದ್ಧಿ ಸ್ಥಾಪನೆ ಎಂಬುದು ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಲಿಂಗಾಯತರ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ, ರಾಜ್ಯ ಸರ್ಕಾರ ಶೇ.16-18ರಷ್ಟು ಮೀಸಲಾತಿಯನ್ನು ಕಲ್ಪಿಸಲು ಈ ಮೂಲಕ ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.



