ಡಿವಿಜಿ ಸುದ್ದಿ, ದಾವಣಗೆರೆ: ಬೆಂಗಳೂರಿನ ಆದರ್ಶ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ನ 24 ನೇ ವರ್ಷದ ವಾರ್ಷಿಕೋತ್ಸವ ಸಂದರ್ಭದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾಧ್ಯಕ್ಷ ಸಾಲಿಗ್ರಾಮ ಗಣೇಶ್ ಶೆಣೈ ಅವರಿಗೆ ‘ಆದರ್ಶ ರತ್ನ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರಿನ ಜಯನಗರದ ಹೆಚ್.ಎನ್.ಕಲಾಕ್ಷೇತ್ರದ ಸಭಾಂಗಣದಲ್ಲಿ ಹಿರಿಯ ಸಾಹಿತಿ ಡಾ. ಎಚ್. ಎಸ್. ವೆಂಕಟೇಶ್‌ಮೂರ್ತಿ ಅವರು ಗಣೇಶ್ ಶೆಣೈ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಲೆ, ಸಾಹಿತ್ಯ, ಸಂಗೀತ, ಕನ್ನಡ ಸಂಘಟನೆ ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕನ್ನಡಪರ ಚಿಂತಕ ಡಾ.ಸಿ.ಸೋಮಶೇಖರ್, ನಟ, ನಿರ್ದೇಶಕ ಸುಚೇಂದ್ರ ಪ್ರಸಾದ್, ಗಾಯಕಿ ಅರ್ಚನಾ ಉಡುಪ ಅವರಿಗೂ ಸಹ ಪ್ರಶಸ್ತಿ ಪ್ರದಾನ ಮಾಡಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಬಸವನಗುಡಿ ಕ್ಷೇತ್ರದ ಶಾಸಕ ಎಲ್.ಎ.ರವಿ ಸುಬ್ರಮಣ್ಯ, ಪೊಲೀಸ್ ಮಹಾನಿರ್ದೇಶಕ ಕೆ.ವಿ. ರವೀಂದ್ರನಾಥ್ ಠಾಗೂರ್, ಕರ್ನಾಟಕ ಸುಗಮ ಸಂಗೀತ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಗಾಯಕರಾದ ವೈ.ಕೆ.ಮುದ್ದುಕೃಷ್ಣ, ಸಂಗೀತ ನಿರ್ದೇಶಕ ನಗರ ಶ್ರೀನಿವಾಸ ಉಡುಪ, ಹಿರಿಯ ರಂಗಕರ್ಮಿ ಶ್ರೀನಿವಾಸ ಕಪ್ಪಣ್ಣ ಉಪಸ್ಥಿತರಿದ್ದರು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷರು, ಆದರ್ಶ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ನ ಅಧ್ಯಕ್ಷರು, ಕರ್ನಾಟಕ ಸುಗಮ ಸಂಗೀತ ಪರಿಷತ್ ಕಾರ್ಯಾಧ್ಯಕ್ಷ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.



