ಡಿವಿಜಿ ಸುದ್ದಿ , ಬೆಂಗಳೂರು: ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಮತ್ತು ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆಗೆ ಕಾರಣವಾದ ಅವಹೇಳನಕಾರಿ ಪೋಸ್ಟ್ ಹಾಕಿರುವ ಯುವಕ ಕಾಂಗ್ರೆಸ್ ಕಾರ್ಯಕರ್ತ ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ನವೀನ್ ಬಿಜೆಪಿ ಕಾರ್ಯಕರ್ತ ಅಲ್ಲ, ಕಾಂಗ್ರೆಸ್ ಕಾರ್ಯಕರ್ತ. ಈ ಬಗ್ಗೆ ಡಿಕೆ ಶಿವಕುಮಾರ್ ಅವರಿಗೆ ಮಾಹಿತಿ ಗೊತ್ತಿಲ್ಲದೆ ಮಾತನಾಡಿದ್ದಾರೆ. ಒಂದು ಪಕ್ಷದ ಅಧ್ಯಕ್ಷರಾದವರು ಈ ರೀತಿ ಮಾತನಾಡೋದು ಸರಿಯಲ್ಲ. ಶಿವಕುಮಾರ್ ಅವರಿದ್ದ ಪೋಸ್ಟ್ ನಲ್ಲಿ ನವೀನ್ ಇರುವ ಫೋಟೋ ಬಿಡುಗಡೆ ಮಾಡಿ, ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು.

ಕಾಂಗ್ರೆಸ್ ಮತ್ತು ಎಸ್ ಡಿಪಿಐ ನಡುವೆ ಸಂಘರ್ಷ ಏರ್ಪಟ್ಟಿದೆ. ಈ ಗಲಭೆಗೆ ಇದೇ ಕಾರಣ. ಅದನ್ನು ಮುಚ್ಚಿಟ್ಟುಕೊಳ್ಳಲು ಹೀಗೆ ಮಾಡುತ್ತಿದ್ದಾರೆ. ಪ್ರತಿ ಹಬ್ಬಕ್ಕೂ ನವೀನ್ ಪೋಸ್ಟ್ ಹಾಕ್ತಿದ್ದ. ಆತನ ಫೇಸ್ ಬುಕ್ ನೋಡಿದರೆ ಕಾಂಗ್ರೆಸ್ ಕಾರ್ಯಕರ್ತ ಎನ್ನುವುದು ಗೊತ್ತಾಗುತ್ತದೆ ಎಂದರು.
ಗಲಭೆ ಪೂರ್ವಯೋಜಿತವಾಗಿ ದಾಳಿ. ಪೊಲೀಸ್ ಸ್ಟೇಷನ್ ಗೆ ಬೆಂಕಿ ಇಟ್ಟಿದ್ದಾರೆ. ಇದನ್ನು ನೋಡಿದರೆ ಅವರ ಉದ್ದೇಶ ಕೊಲ್ಲುವುದಾಗಿತ್ತು ಎಂಬುದು ಸ್ಪಷ್ಟ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಸರ್ಕಾರ ಮತ್ತಷ್ಟು ಕಟ್ಟೆಚ್ಚರ ವಹಿಸಿದೆ ಎಂದರು.

ಗಲಭೆ ಮಾಡಿದ ಕಿಡಿಗೇಡಿಗಳಿಂದಲೇ ಆಗಿರುವ ನಷ್ಟವನ್ನು ವಸೂಲಿ ಮಾಡಲಾಗುವುದು. ಕಿಡಿಗೇಡಿಗಳನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಪೊಲೀಸರ ವಾಹನಗಳನ್ನು ಸುಟ್ಟು ಹಾಕಿದ್ದಾರೆ. ಪೊಲೀಸ್ ಠಾಣೆಗೆ ಬೆಂಕಿ ಇಟ್ಟು, ಅನೇಕ ಬಡವರು ತಮ್ಮ ಆಸ್ತಿಪಾಸ್ತಿ ಕಳೆದುಕೊಂಡಿದ್ದಾರೆ. ಈ ಎಲ್ಲ ನಷ್ಟವನ್ನು ದುಷ್ಕರ್ಮಿಗಳಿಂದಲೇ ವಸೂಲಿ ಮಾಡುತ್ತೇವೆ. ಎಸ್‌ಡಿಪಿಐ ಸಂಘಟನೆಯನ್ನು ನಿಷೇಧ ಮಾಡುವ ನಿಟ್ಟಿನಲ್ಲಿ ಸರಕಾರ ದಿಟ್ಟ ಕ್ರಮ ತೆಗೆದುಕೊಳ್ಳುತ್ತದೆ ಎಂದರು.
ಮಾಜಿ ಸಚಿವ ಕೆ.ಜೆ.ಜಾರ್ಜ್ ಜೊತೆ ಇರುವ ಆರೋಪಿ ಪಾಷಾ ಫೋಟೋ ಬಗ್ಗೆಯೂ ತನಿಖೆ ನಡೆಯುತ್ತಿದೆ. ಪೊಲೀಸರು ಎಲ್ಲ ಮಾಹಿತಿ ಕಲೆಹಾಕುತ್ತಿದ್ದಾರೆ. ಯಾರೇ ತಪ್ಪಿತಸ್ಥರು ಇದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.



