ಡಿವಿಜಿ ಸುದ್ದಿ, ಹರಿಹರ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿರುವ ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿಯಾಗಿದ್ದು, ಈ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಶಾಸಕ ರಾಮಪ್ಪ ಆಗ್ರಹಿಸಿದರು.
ಹರಿಹರದಲ್ಲಿ ಮುಸ್ಲಿಂ ಸಮುದಾಯದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯವನ್ನು ಕೇಂದ್ರೀಕರಿಸಿ ಈ ಕಾಯ್ದೆ ಜಾರಿಗೆ ತರಲಾಗಿದೆ. ಈ ಕಾಯ್ದೆ ಜಾತ್ಯತೀತ ತತ್ವಕ್ಕೆ ವಿರುದ್ಧವಾಗಿದ್ದು, ಈ ಕೂಡಲೇ ಕಾಯ್ದೆಯನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.
ಎಂಎಲ್ ಸಿ ಅಬ್ದುಲ್ ಜಬ್ಬಾರ್ ಮಾತನಾಡಿ, ಸೂರ್ಯ ಹುಟ್ಟಿದ ಮೇಲೆ ಮುಳುಗಲೇ ಬೇಕು. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಆಡಳಿತ ಒಂದಲ್ಲ ಒಂದು ದಿನ ಕೊನೆಗಾಣದಲಿದೆ ಎಂದರು.
ಇನ್ನು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಒನ್ ಪಾಯಿಂಟ್ ಪ್ರೋಗ್ರಾಮ್ ಜಾರಿಗೆ ತರುತ್ತಿದ್ದಾರೆ. ಮುಸ್ಲಿಂ ಸಮುದಾಯ ಟಾರ್ಗೆಟ್ ಮಾಡಿದ್ದು, ಅವರ ವಿರುದ್ಧದ ಕಾಯ್ದೆಯನ್ನು ಜಾರಿಗೆ ತರುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಶಿವಶಂಕರ್ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು.



