ಡಿವಿಜಿ ಸುದ್ದಿ, ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿಯಡಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ನಿವೃತ್ತ, ಮರಣ ಅಥವಾ ಇತರ ಕಾರಣಗಳಿಂದ ತೆರವಾಗಿರುವ ಹುದ್ದೆಗಳನ್ನು ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪೌರ ಕಾರ್ಮಿಕ ಪಾತ್ರ ಪ್ರಮುಖವಾಗಿದ್ದು, ಖಾಲಿ ಇರುವ ಹುದ್ದೆಗಳನ್ನು ಕೂಡಲೇ ತುಂಬಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಬಳಿ 47.24 ಕೋಟಿ ಲಭ್ಯವಿದೆ. ಏಪ್ರಿಲ್ ಅಂತ್ಯದವರೆಗೆ 12 ನಗರಗಳಲ್ಲಿ ಖಾಸಗಿ ಟ್ಯಾಂಕರುಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗಿದೆ. ಮುಂದಿನ ಎರಡು ತಿಂಗಳಲ್ಲಿ 23 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮಸ್ಯೆ ಉದ್ಭವಿಸುವ ಸಾಧ್ಯತೆ ಎಚ್ಚರ ವಹಿಸಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.



