ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಇನ್ನು ಎರಡ್ಮೂರು ತಿಂಗಳು ಮುಂದುವರಿದರೂ ಅಚ್ಚರಿ ಪಡಬೇಕಿಲ್ಲ. ಹೀಗಾಗಿ ಅರ್ಥಿಕತೆಯನ್ನು ಸುಧಾರಿಸುವುದರ ಜೊತೆ ಜೊತೆಗೆ ಕೊರೊನಾ ವಿರುದ್ಧದ ಹೋರಾಟ ಮುಂದುವರಿಯಲಿದೆ. ಮೇ 04 ನಂತರ ಕೆಲವು ವಲಯಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ. 04 ನಂತರ ಕಂಟೇನ್ ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದ ಕಡೆ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ ಮಾಡಿ, ಆರ್ಥಿಕ ಚಟುವಟಿಕೆ ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಮೇ 04 ನಂತರ ಕೇಂದ್ರ ಸರ್ಕಾರದ ಮಾರ್ಗ ಸೂಚಿ ಅನ್ವಯ ಲಾಕ್ ಡೌನ್ ಸಡಿಲಿಕೆ ಮಾಡಲಾಗುವುದು ಎಂದು ತಿಳಿಸಿದರು.

ಮಾಲ್, ಚಿತ್ರಮಂದಿರ, ಹೋಟೆಲ್, ಮದ್ಯ ಮಾರಾಟಕ್ಕೆ ಸದ್ಯಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಹೋಟೆಲ್ ಗಳಲ್ಲಿ ಪಾರ್ಸಲ್ ತಗೆದುಕೊಂಡು ಹೋಗಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರಿನಲ್ಲಿ ಕಳೆದ ೆರಡು ದಿನದಿಂದ ಯಾವುದೇ ಹೊಸ ಪ್ರಕರಣ ದಾಖಲಾಗಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ, ಬೆಂಗಳೂರಲ್ಲಿಯೂ ಆರ್ಥಿಕ ಚಟುವಟಿಕೆ ಪ್ರಾರಂಭಿಸಲು ಅವಕಾಶ ನೀಡಲಾಗುವುದು.
ಇಂದು ಸಂಜೆ 4 ಗಂಟೆಗೆ ಎಲ್ಲ ಕೈಗಾರಿಕೋದ್ಯಮಿಗಳ ಜೊತೆ ಮಾತುಕತೆಗೆ ಆಹ್ವಾನ ನೀಡಿದ್ದು, ಮಾತುಕತೆ ನಂತರ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕೆ ತೆರೆಯುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.



