ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ನಿಂದ ಗುಣಮುಖರಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಇಂದು ಮತ್ತೊಮ್ಮೆ ಯಡಿಯೂರಪ್ಪ ಅವರನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗುವುದು. ವರದಿ ನೆಗೆಟಿವ್ ಬಂದಿದಲ್ಲಿ ಶೀಘ್ರವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.
ಕಳೆದ ಎಂಟು ದಿನಗಳಿಂದ ನಗರದ ಮಣಿಪಾಲ್ ಆಸ್ಪತ್ರೆಗೆ ಸಿಎಂ ಯಡಿಯೂರಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಬಹುತೇಕ ಚೇತರಿಕೆ ಕಂಡುಬಂದಿದ್ದು, ಇಂದು ಕೋವಿಡ್-19 ನೆಗೆಟಿವ್ ಬಂದಿರುವ ಹಿನ್ನಲೆಯಲ್ಲಿ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗು ಸಾಧ್ಯತೆ ಹೆಚ್ಚಾಗಿದೆ.
ಆ.2ರಂದು ಆಸ್ಪತ್ರೆಗೆ ದಾಖಲಾಗಿದ್ದ ಯಡಿಯೂರಪ್ಪ ಅವರಿಗೆ ಭಾನುವಾರ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಇಂದು ವರದಿ ಬಂದಿದ್ದು, ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಎಂದು ಆಸ್ಪತ್ರೆ ವೈದ್ಯರು ಖಚಿತಪಡಿಸಿದ್ದಾರೆ. ಸಂಜೆಯೊಳಗೆ ಮತ್ತೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ. ವರದಿ ನೆಗೆಟಿವ್ ಬಂದಲ್ಲಿ ಮತ್ತೊಂದು ಸುತ್ತಿನ ಆರೋಗ್ಯ ಪರೀಕ್ಷೆ ನಡೆಯಲಿದೆ.
ಸ್ವ್ಯಾಬ್ ಸಂಗ್ರಹದ 10 ದಿನಗಳ ಬಳಿಕ ವೈದ್ಯಕೀಯ ಪರೀಕ್ಷೆ ನೆಗೆಟಿವ್ ಗಾಗಿ ಕಾಯದೆ, ರೋಗಿಗಳನ್ನು ಬಿಡುಗಡೆ ಮಾಡಬಹುದಾಗಿದೆ. ಯಡಿಯೂರಪ್ಪ ಅವರು ಆಸ್ಪತ್ರೆಯಲ್ಲಿ 8 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪ ಅವರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಪರೀಕ್ಷೆಯ ದೃಢೀಕರಣಕ್ಕೆ ಕಾಯಬೇಕಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.



