ಡಿವಿಜಿ ಸುದ್ದಿ, ಬೆಂಗಳೂರು: ಕೋವಿಡ್ 19 ಪ್ರಕರಣಗಳು ಪತ್ತೆಯಾದ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್-19 ಪ್ರಕರಣರ ಪತ್ತೆಯಿಲ್ಲದ ಪ್ರದೇಶದಲ್ಲಿ ಏ.20 ನಂತರ ವಾಹನ ಓಡಾಟ ಮತ್ತು ಸರಕು ಸಾಗಣೆಗೆ ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕೋವಿಡ್ 19 ನಿರ್ವಹಣೆ ಕುರಿತಂತೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 20ರ ನಂತರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಕಂಟೇನ್ಮೆಂಟ್ ಝೋನ್ ಗುರುತಿಸುವುದು ಮತ್ತು ಇತರ ಪ್ರದೇಶಗಳಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಚರ್ಚಿಸಲಾಯಿತು.

ಕಂಟೈನ್ಮೆಂಟ್ ಝೋನ್ ನಲ್ಲಿ ಇನ್ನಷ್ಟು ಕಠಿಣ
ಕಂಟೈನ್ಮೆಂಟ್ ಝೋನ್ ನಲ್ಲಿಇನ್ಸಿಡೆಂಟ್ ಕಮಾಂಡರ್ ನೇಮಿಸಲಾಗುವುದು. ಅವರಿಗೆ ಮ್ಯಾಜಿಸ್ಟೀರಿಯಲ್ ಅಧಿಕಾರ ನೀಡಲಾಗುವುದು. ಅಲ್ಲದೆ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿ ತಂಡ ರಚಿಸಲಾಗುವುದು. ಅವರು ಕಂಟೈನ್ಮೆಂಟ್ ಝೋನ್‌ಗಳ ಮೇಲ್ಚಿಚಾರಣೆ ವಹಿಸಲಿದ್ದಾರೆ. ಈ ಪ್ರದೇಶದಲ್ಲಿ ಲಾಕ್ ಡೌನ್ ಇನ್ನಷ್ಟು ಕಠಿಣಗೊಳಿಸಲಾಗುವುದು. ಯಾರೂ ಮನೆಯಿಂದ ಹೊರ ಬರುವಂತಿಲ್ಲ. ಮನೆ ಬಾಗಿಲಿಗೆ ಅಗತ್ಯ ವಸ್ತು ತಲುಪಿಸುವ ವ್ಯವಸ್ಥೆ ಮಾಡಲಾಗುವುದು.
ಐಟಿ ಬಿಟಿ ವಲಯಕ್ಕೆ ಶೇ 33 ರಷ್ಟು ಸಿಬ್ಬಂದಿಗೆ ಅನುಮತಿ ನೀಡಲಾಗುವುದು. ನಗರ ಪ್ರದೇಶದಲ್ಲಿ ಕಾರ್ಮಿಕರಿಗೆ ಉಳಿದುಕೊಳ್ಳುವ ವ್ಯವಸ್ಥೆ ಇರುವಲ್ಲಿ ನಿರ್ಮಾಣ ಚಟುವಟಿಕೆ ಆರಂಭಿಸಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಉತ್ಪಾದನಾ ವಲಯ, ಕೈಗಾರಿಕೆಗಳು, ಎಸ್ಇಝಡ್‌ಗಳು, ಕೈಗಾರಿಕಾ ವಸಾಹತು ತೆರೆಯಲು ಅವಕಾಶ ನೀಡಲಾಗುವುದು ಎಂದರು.
ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಓಡಾಡಲು ಅವಕಾಶವಿಲ್ಲ. ಬೆಂಗಳೂರು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಕೈಗಾರಿಕೆಗಳ ಉದ್ಯೋಗಿಗಳ ಓಡಾಟದ ದೃಷ್ಟಿಯಿಂದ ಈ ಮೂರು ಜಿಲ್ಲೆಗೆಳಿಗೆ ಓಡಾಡಕ್ಕೆ ಅವಕಾಶ ಕಲ್ಪಿಸಲಾಗುವುದು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಡುವುದು ಕಡ್ಡಾಯ. ಮೇ 3ರ ವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ತಿಳಿಸಿದರು.



