ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿರುವುದರಿಂದ ಕೋವಿಡ್ ಪ್ರಕರಣಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸಲು, ಸರ್ಕಾರ ಹೊಸ ನಿಯಮಾವಳಿಗಳನ್ನು ರೂಪಿಸಿ ಕಟ್ಟುನಿಟ್ಟಾಗಿ ಜಾರಿ ತರುವಂತೆ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಜ್ಞರ ಜತೆ ಕೋವಿಡ್ ನಿಯಂತ್ರಣ ಕುರಿತಂತೆ ಶುಕ್ರವಾರ ನಡರಸಿದ ಚರ್ಚೆ ಅಪೂರ್ಣವಾಗಿದ್ದು, ಇಂದು ಚರ್ಚೆ ಮುಂದುವರಿಯಲಿದೆ. ಈ ಸಭೆಯ ಬಳಿಕ ಸರ್ಕಾರ ಹೊಸ ನಿಯಮಾವಳಿಗಳನ್ನು ಒಳಗೊಂಡ ಹೊಸ ಮಾರ್ಗಸೂಚಿಯನ್ನು ಭಾನುವಾರ ಪ್ರಕಟಿಸುವ ಸಾಧ್ಯತೆ ಇದೆ.
ಮಳೆಗಾಲದಲ್ಲಿ ಕೊರೊನಾ ವೈರಸ್ ನೈಸರ್ಗಿಕವಾಗಿ ಅಧಿಕ ಪ್ರಮಾಣದಲ್ಲಿ ಹರಡುವ ಸಾಧ್ಯತೆ ಇದೆ. ರಾಜ್ಯ ಸರ್ಕಾರಕ್ಕೆ ಇದೊಂದು ದೊಡ್ಡ ಸವಾಲಾಗಿದ್ದು, ರೋಗಿಗಳ ಜೀವವನ್ನು ಉಳಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಜನರ ಪ್ರಾಣ ಉಳಿಸುವುದು ಸರ್ಕಾರದ ಆದ್ಯತೆ ಆಗಿದ್ದು, ಇದಕ್ಕಾಗಿ ಯಾವುದೇ ಕ್ರಮ ತೆಗೆದುಕೊಳ್ಳಲು ಸರ್ಕಾರ ಸಿದ್ಧವಿದೆ. ಎಲ್ಲ ಸಲಹೆ ಸೂಚನೆಗಳನ್ನು ಸರ್ಕಾರ ಪಾಲಿಸುತ್ತದೆ ಎಂದು ಯಡಿಯೂರಪ್ಪ ಸಭೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ್, ನಾರಾಯಣ ಹೃದಯಾಲಯದ ಡಾ.ದೇವಿಶೆಟ್ಟಿ, ಡಾ.ಗಿರೀಶ್, ಡಾ.ಸುದರ್ಶನ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಭಾಗಿಯಾಗಿದ್ದರು.



