ನವದೆಹಲಿ: ಮಹಾಮಾರಿ ಕೊರೊನಾ ವೈರಸ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ ಇಡೀ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,293 ಜನರಿಗೆ ದೃಢಪಟ್ಟಿದ್ದು, 71 ಮಂದಿ ಸಾವನ್ನಪ್ಪಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಬೆಳಗ್ಗೆ ನೀಡಿದ ಮಾಹಿತಿ ಪ್ರಕಾರ, ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 37,336ಕ್ಕೆ ಏರಿಕೆಯಾಗಿದೆ. ಇದರಲ್ಲಿ 26,167 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, 9,950 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿವರೆಗೆ ದೇಶದಲ್ಲಿ 1,218 ಮಂದಿಯನ್ನು ಕೊರೊನಾ ವೈರಸ್ ಬಲಿ ಪಡೆದಿದೆ.
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ. ಶುಕ್ರವಾರ ಸಂಜೆಯ ಮಾಹಿತಿ ಪ್ರಕಾರ 216 ಮಂದಿ ಗುಣಮುಖರಾಗಿದ್ದು, 22 ಮಂದಿ ಮೃತಪಟ್ಟಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕ 12 ನೇ ಸ್ಥಾನ ಪಡೆದಿದೆ.



