ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಡೀ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,552 ಮಂದಿಗೆ ಕೊರೊನಾ ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಈ ಬಗ್ಗೆ ಮಾಹಿತಿ ನೀಡಿದ್ದು, ದೇಶಾದ್ಯಂತ ಒಂದೇ ದಿನ 18,552 ಮಂದಿಗೆ ಸೋಂಕು ಪತ್ತೆಯಾಗಿದೆ. ಈ ಮೂಲಕ 384 ಜನ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ ಗಡಿ ದಾಟಿದ್ದು, ಮೃತಪಟ್ಟವರ ಸಂಖ್ಯೆ 15,600ಕ್ಕೆ ಏರಿಕೆಯಾಗಿದೆ.
ಒಟ್ಟು ಪ್ರಕರಣಗಳಲ್ಲಿ 2,95,879 ಜನರಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನೂ 1,97,387 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.ಮಹಾರಾಷ್ಟ್ರದಲ್ಲಿ ಕೋವಿಡ್-19 ಭಾರೀ ಪ್ರಮಾಣದಲ್ಲಿ ಹರಡಿದ್ದರಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಮಹಾರಾಷ್ಟ್ರ ದೇಶದಲ್ಲಿಯೇ ಹೆಚ್ಚು 1,52,765 ಮಂದಿಗೆ ಕೋವಿಡ್-19 ಪತ್ತೆಯಾಗಿದೆ.
ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ದೆಹಲಿ ಎರಡನೇ ಸ್ಥಾನದಲ್ಲಿದೆ. ಅಲ್ಲಿ 77,240 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಮೂರನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ 74,622 ಜನರಿಗೆ ಸೋಂಕು ದೃಢಪಟಿದೆ.



