ಡಿವಿಜಿ ಸುದ್ದಿ, ದಾವಣಗೆರೆ: ಪೆಟ್ರೋಲ್ , ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಇಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಎತ್ತಿನಗಾಡಿ ಓಡಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು.
ನಗರದ ಜಯದೇವ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿದ್ದರೂ, ಕೇಂದ್ರ ಸರ್ಕಾರ ಸತತವಾಗಿ ತೈಲ ಬೆಲೆ ಏರಿಕೆ ಮಾಡಿದೆ. ಇದರಿಂದ ಜನ ಸಾಮಾನ್ಯರು ಜೀವನ ಮಾಡುವುದು ಕಷ್ಟವಾಗಿದೆ. ದೇಶದಾದ್ಯಂತ ಕೊರೊನಾ ವೈರಸ್ ಭೀತಿಯಿಂದ ಜೀವನ ಮಾಡುವುದೇ ಕಷ್ಟವಾಗಿರುವ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಕೆಪಿಸಿಸಿ ಜಿಲ್ಲಾಧ್ಯಕ್ಷ ಮಂಜಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ತೈಲ ಉತ್ಪನ್ನಗಳ ಮೇಲಿನ ಸುಂಕವನ್ನು ಹೆಚ್ಚಿಸುವ ಮೂಲಕ ಪೆಟ್ರೋಲ್, ಡಿಸೇಲ್ ದರ ಏರಿಕೆಗೆ ಕಾರಣವಾಗಿದೆ. ತೈಲದ ಮೇಲಿನ ಸುಂಕ ಹೆಚ್ಚಿಸಿ ಜನರ ಹಣ ಸುಲಿಗೆ ಮಾಡುತ್ತಿದೆ ಎಂದು ದೂರಿದರು. ಕೇಂದ್ರ ಸರ್ಕಾರ ಸತತ 18 ದಿನದಲ್ಲಿ ಡಿಸೇಲ್ ಬೆಲೆ 10.48 ಹಾಗೂ ಪೆಟ್ರೋಲ್ ಬೆಲೆ 8.50 ರೂಪಾಯಿ ಹೆಚ್ಚಳ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಗನಹಳ್ಳಿ ಪರಶುರಾಮ್, ಜಿಲ್ಲಾ ಪಂಚಾಯತಿ ಸದಸ್ಯ ಕೆ.ಎಸ್. ಬಸವಂತಪ್ಪ, ಅಣಜಿ ಚಂದ್ರಶೇಖರ್, ಮುದೇಗೌಡ್ರು ಗಿರೀಶ್, ಪಾಲಿಕೆ ಸದಸ್ಯರಾದ ದೇವರ ಮನೆ ಶಿವಕುಮಾರ್, ಗಡಿಗುಡಾಳ್ ಮಂಜುನಾಥ್ , ವಿನಾಯಕ ಪೈಲ್ವಾನ್, ಪಾಮೇನಹಳ್ಳಿ ನಾಗರಾಜ್, ಸುಷ್ಮಾ ಪ್ರಕಾಶ್ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



