ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಪಾಸಿಟಿವ್ ಹೆಚ್ಚಿರುವ ಜಿಲ್ಲೆಯಲ್ಲಿ ಲಾಕ್ಡೌನ್ ಘೋಷಣೆ ಬಗ್ಗೆ ಆಯಾ ಜಿಲ್ಲಾಡಳಿತ ಉಸ್ತವಾರಿ ಸಚಿವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಲಾಕ್ಡೌನ್ ಹೇರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಗದೀಶ್ ಶೆಟ್ಟರು ಹೇಳಿದರು. ಶಿವಮೊಗ್ಗದಲ್ಲಿ ಅರ್ಧ ದಿನ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ. ಇನ್ನುಳಿದಂತೆ ಆಯಾ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳಲಿದ್ದಾರೆ.
ಸಿಎಂ ವಿವಿಧ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಒಂದೇ ಪರಿಹಾರವಾಗುವುದಿಲ್ಲ. ನೀವು ಏನು ಮಾಡುತ್ತೀರೋ ಗೊತ್ತಿಲ್ಲ ಇನ್ನು ಈ ತಿಂಗಳ ಕೊನೆಯೊಳಗೆ ಕೋವಿಡ್ ನಿಯಂತ್ರಣಕ್ಕೆಬರಬೇಕು ಎಂದು ಕಟ್ಟು ನಿಟ್ಟಾದ ಸೂಚನೆ ನೀಡಿದರು.
ಬೆಂಗಳೂರು ನಗರ, ದಕ್ಷಿಣ ಕನ್ನಡ, ಧಾರವಾಡ, ಬಳ್ಳಾರಿ, ಉಡುಪಿ , ಕಲಬುರ್ಗಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬೀದರ್, ಧಾರವಾಡ, ಗದಗ, ಮೈಸೂರು ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಬೀದರ್ ಜಿಲ್ಲೆಯ ಮರಣ ಪ್ರಮಾಣ ನಿಯಂತ್ರಿಸುವಂತೆ ಸೂಚಿಸಿದರು.
ಕಂಟೈನ್ಮೆಂಟ್ ವಲಯಗಳಲ್ಲಿ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಕ್ಷೇತ್ರ ಮಟ್ಟದ ಆರೋಗ್ಯ ಸಿಬ್ಬಂದಿ ಕೊರತೆ ಇದ್ದರೆ, ಕೂಡಲೇ ನೇಮಕಾತಿ ಮಾಡಿಕೊಳ್ಳಿ. ಹೊರಗಿನಿಂದ ವಲಸೆ ಬಂದವರನ್ನು ಕ್ವಾರಂಟೈನ್ ಒಳಪಡಿಸುವುದರ ಜತಗೆ ಹೆಚ್ಚಿನ ನಿಗಾ ಇಡಬೇಕು. ಧಾರ್ಮಿಕ ಸ್ಥಳಗಳಲ್ಲಿ, ಮಾರುಕಟ್ಟೆ ಮೊದಲಾದ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ಎಚ್ಚರ ವಹಿಸಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ನಿರ್ವಹಣೆಯಲ್ಲಿ ತೊಡಗಿರುವ ಡಿ ಗ್ರೂಪ್ ನೌಕರರ ಪ್ರೋತ್ಸಾಹಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.



