ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿರುವ ಸರ್ಕಾರಿ ಜಮೀನು ಗುರುತಿಸಿ ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ಜಮೀನು ಗುರುತಿಸಿ ಬಡವರಿಗೆ ನಿವೇಶನ ವಸತಿ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಮೆಡಿಕಲ್ ಶಾಪ್‍ಗಳಲ್ಲಿ ಮಾತ್ರೆಗಳನ್ನು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ಈ ಕುರಿತು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಾವಿನ ಪ್ರಮಾಣ ತಗ್ಗಿಸಲು ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಲು ಮುಂದಾಗಬೇಕಿದೆ ಎಂದರು.
ನಮ್ಮ ಸರ್ಕಾರ ರೈತರ ಪರವಾಗಿದೆ. ಕೊರೊನಾ ಸಂದರ್ಭದಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆ ಆಗಲು ನಾವು ಬಿಡುವುದಿಲ್ಲ. ಮುಂದಿನ ಸಭೆಯೊಳಗೆ ಸರ್ಕಾರದ ಎಲ್ಲಾ ಯೋಜನೆಗಳನ್ನು ರೈತರಿಗೆ ತಲಪಿಸಬೇಕು. ರೈತರಿಗೆ ತಲುಪಿಸಿದ ಯೋಜನೆಗಳನ್ನು ಫಲಾನುಭವಿಗಳ ಹೆಸರಿನೊಂದಿಗೆ ಎಲ್ಲಾ ಅಂಕಿ ಅಂಶಗಳ ವರದಿಯನ್ನು ಸಭೆಯಲ್ಲಿ ಒಪ್ಪಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ನೇರ ಹೊಣೆಯಾಗಲಿದ್ದು, ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಳೆಗಾಲದಲ್ಲಿ ಯಾವುದೇ ರಸ್ತೆ ಕಾಮಗಾರಿ ಕೈಗೊಳ್ಳದಿರಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಏಕೆಂದರೆ ಡಾಂಬರೀಕರಣ ಎಲ್ಲ ಹಾಳಾಗಿ ಕೊಚ್ಚಿ ಹೋಗುವ ಸಾಧ್ಯತೆ ಹೆಚ್ಚಿದೆ. ಇದರ ಬದಲಾಗಿ ಬೇಸಿಗೆಯಲ್ಲಿ ಮಾಡಿದರೆ ಒಳಿತು ಎಂದ ಅವರು, ಮಳೆಗಾಲ ಇದಾಗಿದೆ. ಹರಿಹರ, ಹೊನ್ನಾಳಿ ಸೇರಿದಂತೆ ನದಿ ಪಕ್ಕದಲ್ಲಿರುವ ಹಳ್ಳಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಪ್ರವಾಹ ಭೀತಿ ಉಂಟಾದರೆ ಅಲ್ಲಿರುವ ಜನರ ಸ್ಥಳಾಂತರ ಮಾಡಬೇಕು. ಜೊತೆಗೆ ಕಾಳಜಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಹಳ್ಳಿಗಳಲ್ಲಿ ಪಡಿತರದಾರರ ಸಂಖ್ಯೆ ಹೆಚ್ಚಿದ್ದಲ್ಲಿ, ಎರಡು ವಿಭಾಗದಲ್ಲಿ ಪಟ್ಟಿ ತಯಾರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಪ್ರತಿಯೊಬ್ಬರಿಗೂ ಪಡಿತರ ರೇಷನ್ ನೀಡಬೇಕು. ಯಾರೂ ಕೂಡ ಪಡಿತರದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕ್ರಮ ವಹಿಸಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ರಾಜ್ಯ ಪ.ಪಂ ವಾಲ್ಮೀಕಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ಶಾಸಕರಾದ ರವೀಂದ್ರನಾಥ್, ಪ್ರೊ.ಲಿಂಗಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಜಿ.ಪಂ. ಉಪಾಧ್ಯಕ್ಷೆ ಸಾಕಮ್ಮ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ ಹಾಜರಿದ್ದರು.