ಡಿವಿಜಿ ಸುದ್ದಿ, ದಾವಣಗೆರೆ : ಇಡೀ ದೇಶದಲ್ಲಿ ಲಾಕ್ ಡೌನ್ ನಿಂದ ಬಡವರು, ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ನೇರವಾಗಿ ಹತ್ತು ಸಾವಿರ ರೂಪಾಯಿ ಜಮೆ ಮಾಡುವಂತೆ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಆನ್ ಲೈನ್ ಅಭಿಯಾನ ಆರಂಭಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಗತ್ತು ಕೊವಿಡ್ ನಿಂದ ತತ್ತರಿಸಿಹೋಗಿದೆ. ನಮ್ಮ ದೇಶದಲ್ಲೂ ಕೋವಿಡ್ -19 ವಿರುದ್ಧ ಎರಡು ತಿಂಗಳಿನಿಂದ ಲಾಕ್ ಡೌನ್ ಹೇರಲಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಿದೆ. ಆದರೆ, ಕೇಂದ್ರ ಸರ್ಕಾರ ಕೊವಿಡ್ ಬಗ್ಗೆ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಜನ ಸಂಕಷ್ಟ ಅನುಭವಿಸಿದ್ದಾರೆ. ವಲಸೆ ಕಾರ್ಮಿಕರು ಸಂಕಷ್ಟದಲ್ಲಿದ್ದು, ಅವರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದೇವೆ ಎಂದರು.
ಕೇಂದ್ರ ಸರ್ಕಾರ ಅನೇಕ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ, ಸ್ವರ್ಗ ತೋರಿಸಿ ಅಲ್ಲಿದೆ ತೆಗೆದುಕೊಳ್ಳಿ ಎಂದಿದ್ದಾರೆ. ನೇರವಾಗಿ ಬಡವರ ಖಾತೆಗೆ 10 ಸಾವಿರ ಹಣ ಜಮೆ ಮಾಡಬೇಕು ಎಂದು ಆಗ್ರಹಿಸಿದರು. ಜೂನ್ 7 ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.