ಡಿವಿಜಿ ಸುದ್ದಿ, ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುರುಬ ಸಮಾಜದ ವಿರುದ್ಧ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಿರಿಯ ಮುಖಂಡರಾದ ಶಾಮನೂರು ಶಿವಶಂಕರಪ್ಪ ಅವರು ಇತ್ತೀಚೆಗೆ ಸಿದ್ದರಾಮಯ್ಯ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆ. ಹಿರಿಯ ಶಾಸಕರಿಗೆ ಇಂತಹ ಮಾತು ಶೋಭೆ ತರುವಂತಹದಲ್ಲ ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಯಲ್ಲಿ ಕುರುಬ ಸಮಾಜದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಯಡಿಯೂರಪ್ಪ ಸಿಎಂ ಆದ ಮೇಲೆ ಜಿಲ್ಲೆಗೆ ಲಿಂಗಾಯತ ಸಮುದಾಯದ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ. ಹಿರಿಯರಾಗಿ ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಿಳಿಸಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಅಧಿಕಾರಿಗಳು ಮಾತ್ರ ಇದ್ದು, ಲಿಂಗಾಯತ ಸಮುದಾಯದ ಅಧಿಕಾರಿಗಳೂ ಇದ್ದರು. ಶಾಮನೂರು ಶಿವಶಂಕರಪ್ಪ ಅವರು ಸಿದ್ಧರಾಮಯ್ಯ ವಿರುದ್ಧ ವ್ಯಂಗ್ಯವಾಡುವುದನ್ನು ನಿಲ್ಲಿಸಬೇಕು. ಪ್ರತ್ಯೇಕ ಲಿಂಗಾಯ ಧರ್ಮ ವಿಚಾರದಲ್ಲಿ ಸಿದ್ದರಾಮಯ್ಯ ಹೆಸರು ಪದೇ ಪದೇ ಎಳೆದು ತರುವುದು ಸರಿಯಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಲಿಂಗಾಯತ ಧರ್ಮಕ್ಕೆ ಮನವಿ ಮಾಡಿದ್ದರಿಂದಲೇ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಇದರಲ್ಲಿ ಸಿದ್ಧರಾಮಯ್ಯ ಧರ್ಮ ಒಡೆದಿದ್ದಾರೆ ಎಂದರೆ ಹೇಗೆ..? ಸಿದ್ದರಾಮಯ್ಯ ಅವರ ಈ ನಿರ್ಧಾರದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಸೋಲು ಆಗಿದೆ ಎಂದು ಎಂದು ಹೇಳಿಕೆ ಕೊಡುವುದು ಸರಿಯಲ್ಲ ಎಂದರು.
ಈ ಸಂದರ್ಭದಲ್ಲಿ ಬಳ್ಳಾರಿ ಷಣ್ಮುಖಪ್ಪ, ಕೆ.ವಿ ವಿರೂಪಾಕ್ಷಪ್ಪ, ಎಚ್.ಬಿ. ಗೋಣೆಪ್ಪ, ಸಂಗಪ್ಪ, ನಿಂಗಪ್ಪ ಉಪಸ್ಥಿತರಿದ್ದರು.