ಡಿವಿಜಿ ಸುದ್ದಿ. ದಾವಣಗೆರೆ: ವಾಲ್ಮೀಕಿ ಸಮುದಾಯಕ್ಕೆ ಶಿಕ್ಷಣ, ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ನೀಡಬೇಕೆಂದು ಬಹುದಿನದ ಬೇಡಿಕೆಯಾಗಿದೆ. ಈ ಬೇಡಿಕೆ ಈಡೇರುವ ಕಾಲ ಕೂಡಿಬಂದಿದ್ದು, ನ್ಯಾ. ನಾಗಮೋಹನ್ ದಾಸ್ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ ತಕ್ಷಣವೇ ಸರ್ಕಾರ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಹರಿಹರದ ರಾಜನಹಳ್ಳಿಯಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರಗಳು ವಾಲ್ಮೀಕಿ ಸಮುದಾಯಕ್ಕೆ ಶೇ. 7.5 ರಷ್ಟು ಮೀಸಲಾತಿ ನೀಡಲು ಸಾಧ್ಯವಾಗಿರಲಿಲ್ಲ. ಆದರೆ, ನಮ್ಮ ಸರ್ಕಾರ ಶೇ. 7.5 ರಷ್ಟು ಮೀಸಲಾತಿ ನೀಡಲು ಬದ್ಧವಾಗಿದೆ. ಈ ಬಗ್ಗೆ ನ್ಯಾ. ನಾಗಮೋಹನ್ ದಾಸ್ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರು ವರದಿ ಸಲ್ಲಿಸ ತಕ್ಷಣವೇ ಜಾರಿ ಮಾಡುವುದು ನಮ್ಮ ಸರ್ಕಾರದ ಮೊದಲ ಆದ್ಯತೆ ನೀಡಲಾಗುವುದು ಎಂದರು.
35 ವರ್ಷದಿಂದ ತಳವಾರ, ಪರಿವಾರ ಸಮುದಾಯವನ್ನು ಎಸ್ ಟಿ ವರ್ಗಕ್ಕೆ ಸೇರ್ಪಡೆ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ಎರಡು ವರ್ಗವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಲು ನಿರ್ಧಾರ ಕೈಗೊಂಡಿದ್ದಾರೆ. ಈ ಮಹತ್ವದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಇದೇ ತಿಂಗಳು ಒಪ್ಪಿಗೆ ನೀಡಲಿದೆ. ಇನ್ನು ವಾಲ್ಮೀಕಿ ಸಮುದಾಯಕ್ಕೆ ಪ್ರತ್ಯೇಕ ಸಚಿವಾಲಯ ವನ್ನು ಪ್ರಾರಂಭಿಸಲು ಸ್ವಾಮೀಜಿ ಒತ್ತಾಯಿಸಿದ್ದಾರೆ ಅದನ್ನು ನೀಡಲು ಸರ್ಕಾರ ಸಿದ್ಧವಿದೆ. ಇದಲ್ಲದೆ ಎಸ್ಸಿ, ಎಸ್ಟಿ ಸಮುದಾಯಕ್ಕೆ ಸರ್ಕಾರದಿಂದ ಏನು ಮಾಡಲು ಸಾಧ್ಯವಿದೆಯೋ ಅದನ್ನು ನೆರವೇರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.



