ಡಿವಿಜಿ ಸುದ್ದಿ, ದಾವಣಗೆರೆ: ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಹಾಗೂ ವಿವಿಧ ರಾಸಾಯನಿಕ ಮಿಶ್ರಿತ ಬಣ್ಣದ ಗೌರಿ-ಗಣೇಶ ಮೂರ್ತಿಯನ್ನು ನದಿ, ಕಾಲುವೆ, ಬಾವಿ, ಕೆರೆಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ವಿಗ್ರಹಗಳಲ್ಲಿ ಉಪಯೋಗಿಸಿದ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ಮತ್ತು ರಾಸಾಯನಿಕ ಬಣ್ಣಗಳಿಂದ ಜಲಮಾಲಿನ್ಯ ಉಂಟಾಗುತ್ತದೆ. ಇದು ಜಲಚರ ಪ್ರಾಣಿ, ಪಶು, ಪಕ್ಷಿಗಳಿಗೆ ಅಪಾಯ ಉಂಟು ಮಾಡುತ್ತದೆ. ಆದ್ದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ ಪ್ರಕಾರ ಕೆರೆ, ನದಿ, ಕಾಲುವೆ, ಬಾವಿಗಳಲ್ಲಿ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅವಶ್ಯಕವಾಗಿರುತ್ತದೆ. ಆದ್ದರಿಂದ ಆಗಸ್ಟ್ 22 ರಿಂದ ದಾವಣಗೆರೆ ಜಿಲ್ಲೆಯಲ್ಲಿ ಆಚರಿಸಲಿರುವ ಗಣೇಶ ಚತುರ್ಥಿಯನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರ ಸಂರಕ್ಷಣೆಗಾಗಿ ಪರಿಸರ ಸ್ನೇಹಿಯಾಗಿ ಆಚರಿಸಲು ಕೆಳಕಂಡ ಅನುಸರಣಾ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದೆ.
- ಕೊರೊನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಇರುವ ಅರಿಶಿನದಲ್ಲಿ ಗಣೇಶ ಮೂರ್ತಿಯನ್ನು ತಯಾರಿಸಿ,
- ಮನೆಯಂಗಳದಲ್ಲಿ ವಿಸರ್ಜಿಸಿ ಪರಿಸರ ಮಾಲಿನ್ಯ ನಿರ್ಮೂಲನೆಗೆ ಸಹಕರಿಸಬೇಕು
- ಈ ಸಾಲಿನ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು
- ಸಾರ್ವಜನಿಕರು ಚಿಕ್ಕ ಮತ್ತು ಚೊಕ್ಕ ಅರಿಶಿನ ಗಣೇಶ ಮೂರ್ತಿಗಳನ್ನು ಮನೆಗಳಲ್ಲಿ ಪ್ರತಿಷ್ಟಾಪಿಸಿ
- ಸಾರ್ವಜನಿಕರು ಗಣೇಶ ಮೂರ್ತಿ ಪ್ರತಿಷ್ಟಾಪನೆ ಪರಿಸರಸ್ನೇಹಿ ವಸ್ತುಗಳ ಬಳಕೆ ಮತ್ತು ಸಾಂಪ್ರದಾಯಿಕವಾಗಿ ಆಚರಿಸುವುದು
ಜಿಲ್ಲೆಯಲ್ಲಿ ಕಳೆದ ವರ್ಷ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾರಾಟ ಮಾಡದಂತೆ ನಿರ್ಬಂಧಿಸಿ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿರುವುದು ಹಾಗೂ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ದ ಪರಿಸರ ಸಂರಕ್ಷಣಾ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು.
ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ಮೂರ್ತಿ ಖರೀದಿಸದೇ, ಮನೆಗಳಲ್ಲಿಯೇ ಅರಿಶಿಣದಿಂದ ಅಥವಾ ಜೇಡಿ ಮಣ್ಣಿನಿಂದ ತಯಾರಿಸಿ. ಬಣ್ಣರಹಿತ ಅಥವಾ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಖರೀದಿಸಿ ಎಂದು ಪರಿಸರ ಅಧಿಕಾರಿ ಕೆ.ಬಿ.ಕೊಟ್ರೇಶ್ ತಿಳಿಸಿದ್ದಾರೆ.



