ಡಿವಿಜಿ ಸುದ್ದಿ, ರಾಯಚೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಬಿಜೆಪಿ ಪಕ್ಷ ಸಿದ್ಧವಿದೆ. ಆದರೆ, ಚುನಾವಣೆ ಆಯೋಗ ಇನ್ನು ಅನುಮತಿ ಕೊಟ್ಟಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದೇ ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುತ್ತಿದ್ದು, ಚುನಾವಣೆ ನಡೆಸಲು ಆಯೋಗಕ್ಕೆ ಕೇಳಿಕೊಳ್ಳಲಾಗಿತ್ತು. ಆದರೆ, ಚುನಾವಣೆ ಆಯೋಗವು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ, ಈಗ ಚುನಾವಣೆ ನಡೆಸುವುದಿಲ್ಲ ಎಂದು ಹೇಳಿದೆ. ಆಯೋಗ ನಿರ್ಧಾರದ ವಿರುದ್ಧ ಸರ್ಕಾರ ಹೋಗುವುದಿಲ್ಲ ಎಂದು ತಿಳಿಸಿದರು.
ಉದ್ಯೋಗ ಖಾತರಿ ಯೋಜನೆಯ ಎಲ್ಲ ಬಾಕಿಗಳು ಚುಕ್ತಾ ಆಗಿದ್ದು, ಉದ್ಯೋಗ ಮಾಡುವ ಪ್ರತಿಯೊಬ್ಬ ಕಾರ್ಮಿಕರಿಗೂ 15 ದಿನಗಳಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ರಾಜಕಾರಣಿಗಳು, ಸರ್ಕಾರಿ ನೌಕರರು ಹಾಗೂ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಯಾರೇ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಿದರೂ ಉದ್ಯೋಗ ನೀಡಲಾಗುವುದು ಎಂದು ಹೇಳಿದರು.



