ಡಿವಿಜಿ ಸುದ್ದಿ, ಬಳ್ಳಾರಿ: ಕೊರೊನ ಹಿನ್ನೆಲೆಯಲ್ಲಿ ಸರ್ಕಾರದ ನಿಯಮದಂತೆ ಬನ್ನಿ ಉತ್ಸವವನ್ನು ಸರಳವಾಗಿ ಆಚರಿಸಬೇಕಿದೆ. ಹೀಗಾಗಿ 100 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ತಹಶೀಲ್ದರ್ ಡಿ ಅನಿಲ್ ಕುಮಾರ್ ಹೇಳಿದರು.
ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ, ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಯಿತು. ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಉಚ್ಚಂಗೆಮ್ಮ ದೇವಸ್ಥಾನ ಐತಿಹಾಸಿಕ ಪ್ರಸಿದ್ಧಿ ಹೊಂದಿದ್ದು, ದಸರಾ ಹಬ್ಬ ಪ್ರತಿ ವರ್ಷ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ಈ ಬಾರಿ ಕೊರೊನಾ ಹಿನ್ನೆಲೆ ಸರಳವಾಗಿ ಆಚರಿಸಬೇಕಿದೆ. 100 ಜನರಿಗೆ ಮಾತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಅವಕಾಶವಿದ್ದು ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಹಾಕಿಕೊಂಡು,ದೈಹಿಕ ಅಂತರ ಕಾಪಾಡಿಕೊಂಡು ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ತಿಳಿಸಿದರು.

ದೇವಿಯ ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್, ಕೈಗೆ ಸ್ಯಾನಿಟೈಜರ್ ಹಾಕಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಂಡು ದೇವಿಯ ದರ್ಶನ ಪಡೆಯಬೇಕು. ಬನ್ನಿ ಮಂಟಪ ಸುತ್ತ-ಮುತ್ತ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ, ತಮ್ಮ ತಮ್ಮ ಮನೆಯಲ್ಲಿ ಸರಳವಾಗಿ ದಸರಾವನ್ನು ಆಚರಿಸಿ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಶ್ರೀಧರ್,ಅರಸೀಕೆರೆ ಸಬ್ ಇನ್ಸ್ಪೆಕ್ಟರ್ ಕಿರಣ್ ಕುಮಾರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್,ಗ್ರಾಮ ಲೆಕ್ಕದಿಕಾರಿ ಮಂಜುನಾಥ್,ಗುಮಾಸ್ತ ರಮೇಶ್,ಗ್ರಾಮಸ್ಥರು,ಅರ್ಚಕರು, ಉಪಸ್ಥಿತರಿದ್ದರು.



