ಡಿವಿಜಿ ಸುದ್ದಿ, ಬೆಂಗಳೂರು: ಮೇಕೆದಾಟು, ಎತ್ತಿನಹೊಳೆ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಅನುಷ್ಠಾನದ ಕಾನೂನು ತೊಡಕುಗಳ ನಿವಾರಣೆ ಹಿನ್ನೆಲೆ ಶೀಘ್ರ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ನಿಯೋಗ ಹೋಗಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಮೇಕೆದಾಟು ಯೋಜನೆಯ ಕಾನೂನು ತೊಡಕು ನಿವಾರಿಸಬೇಕಿದೆ. ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ತಾಂತ್ರಿಕ ತೊಡಕುಗಳು ಪರಿಹಾರವಾಗಬೇಕಿದೆ. ಈ ಹಿನ್ನಲೆಯಲ್ಲಿ ನಿಯೋಗದ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.

ಪ್ರಸಕ್ತ ವರ್ಷ ಒಂದು ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಇದೆ. ವಿಶ್ವ ಬ್ಯಾಂಕ್ ನೆರವಿನ ಯೋಜನೆಯಡಿ 52 ಅಣೆಕಟ್ಟೆಗಳ ಪುನಶ್ಚೇತನ ಹಾಗೂ ಅಭಿವೃದ್ಧಿಗೆ ಕೇಂದ್ರ ಜಲ ಆಯೋಗಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. 750 ಕೋಟಿ ಅನುದಾನ ನಿರೀಕ್ಷಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯ 61ನೇ ಕಿ.ಮೀ.ವರೆಗೆ ಹಾಗೂ ಹೊಳಲ್ಕೆರೆ ಫೀಡರ್ ಕಾಮಗಾರಿಗಳನ್ನು ಪ್ರಸಕ್ತ ಸಾಲಿನಲ್ಲೇ ಪೂರ್ಣಗೊಳಿಸಲಾಗುವುದು. ಆದಷ್ಟು ಬೇಗ ಚಿತ್ರದುರ್ಗದ 48 ಕೆರೆಗಳನ್ನು ತುಂಬಿಸಲು ಮತ್ತು ತರೀಕೆರೆ ತಾಲ್ಲೂಕಿನ 10,000 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.




