ಡಿವಿಜಿ ಸುದ್ದಿ, ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಬಗ್ಗೆ ಮಾಹಿತಿ ನೀಡುವಂತೆ ಸಿಸಿಬಿ ಪೊಲೀಸರು ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ನೀಡಿದ್ದಾರೆ.
ಸ್ಯಾಂಡಲ್ ವುಡ್ ನಟ,ನಟಿಯರು ಹಾಗೂ ಸಂಗೀತ ನಿರ್ದೇಶಕರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದಡಿ ಕೇರಳದ ಡಿ. ಅನಿಕಾ ಸೇರಿದಂತೆ ಮೂವರನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದರು.
ಈ ಪ್ರಕರಣಕ್ಕೆ ಸಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಕೆಲ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದು, ಸ್ಯಾಂಡಲ್‌ವುಡ್‌ನ ಹಲವರು ಡ್ರಗ್ಸ್ ಮಾರಾಟದಿಂದಲೇ ಐಷಾರಾಮಿ ಕಾರಿನಲ್ಲಿ ಓಡಾಡುತ್ತಿದ್ದಾರೆ ಎಂದಿದ್ದರು. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಪೊಲೀಸರು, ಡ್ರಗ್ಸ್ ದಂಧೆ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ನೀಡುವಂತೆ ಕೋರಿ ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ನೀಡಿದ್ದಾರೆ.
ಡ್ರಗ್ಸ್ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆತ್ತಿದೆ. ಡಾರ್ಕ್‌ನೆಟ್ ಮೂಲಕ ನಡೆಯುವ ದಂಧೆಯನ್ನೂ ಭೇದಿಸಿದ್ದೇವೆ. ಮಾಹಿತಿ ನೀಡಲು ಉಚಿತ ಸಹಾಯವಾಣಿ 1098ಗೆ ಕರೆ ಮಾಡಬಹುದು ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.



