ಡಿವಿಜಿ ಸುದ್ದಿ, ದಾವಣಗೆರೆ: ಚುನಾವಣೆ ಫಲಿತಾಂಶದ ನಂತರ ಜೆಡಿಎಸ್ ಅಡ್ರೆಸ್ ಇಲ್ಲದಂತಾಗಿದೆ. ಡಿ.ಕೆ.ಶಿವಕುಮಾರ್ ವೀರಾವೇಶದ ಕಟ್ ಆಗಿದೆ. ಸಿದ್ದರಾಮಯ್ಯರನ್ನು ಸಿಎಲ್ ಪಿ ನಾಯಕ ಸ್ಥಾನದಿಂದ ಕೆಳಗಿಳಿಸಿದ್ದೆ ಮಲ್ಲಿಕಾರ್ಜುನ ಖರ್ಗೆ ಅವರು ಕೊಟ್ಟ ಸಿಹಿ ಸುದ್ದಿ ಎಂದು ಸಿ.ಎಂ. ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದರು.
ಹೊನ್ನಾಳಿ ತಾಲ್ಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ಚುನಾವಣೆ ಫಲಿತಾಂಶದ ನಂತರ ಬಿಜೆಪಿ ಮನೆಗೆ ಹೋಗುತ್ತದೆ ಎಂದು ಹೇಳುತ್ತಿದ್ದ ಪ್ರತಿಪಕ್ಷಗಳಿಗೆ ಮತದಾರು ಉತ್ತರ ನೀಡಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಕಷಗಳನ್ನು ಮನೆಗೆ ಕಳುಹಿಸಿದ್ದಾರೆ. ಮತದಾರರ ತೀರ್ಪನ್ನು ಪ್ರತಿಪಕ್ಷಗಳು ಒಪ್ಪಿಕೊಳ್ಳಬೇಕು. ಮೂರೂವರೆ ವರ್ಷ ರಾಜ್ಯದಲ್ಲಿ ಬಿಜೆಪಿ ನೇತೃತ್ವದಲ್ಲಿ ಸ್ಥಿರ ಸರ್ಕಾರ ಇರಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು
ಡಿ.09ರಂದು ಸಿಹಿ ಸುದ್ದಿ ಕೊಡುತ್ತೇವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಅನರ್ಹರು ಮನೆಗೆ ಹೋಗುತ್ತಾರೆ ಎಂದಿದ್ದರು. ಆದರೆ ಈಗ ಮತದಾರರು ಯಾರನ್ನು ಮನೆಗೆ ಕಳುಹಿಸಿದ್ದಾರೆ ಎಂಬುದು ಫಲಿತಾಂಶ ನೋಡಿದರೆ ಗೊತ್ತಾಗುತ್ತದೆ ಎಂದರು.



