ಡಿವಿಜಿ ಸುದ್ದಿ, ದಾವಣಗೆರೆ : ದ್ವಂದ್ವ ಹೇಳಿಕೆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳಲಿದ್ದು, ಜನರು ಬಿಜೆಪಿಗೆ ಜನರು ಆಶೀರ್ವಾದ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ನಗರದ ಸರಸ್ವತಿ ಬಡಾವಣೆಯಲ್ಲಿ ಆಪ್ತರ ಮನೆಯಲ್ಲಿ ನಿರಂತರ ಒಂದು ಗಂಟೆಗೂ ಹೆಚ್ಚು ಕಾಲ ಶಿವ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಪಕ್ಷ ನಾಯಕರು ಜನರಲ್ಲಿ ದ್ವಂದ್ವ ಹೇಳಿಕೆ ನೀಡುವ ಮೂಲಕ ಗೊಂದಲ ಉಂಟು ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಂದು ಕಡೆ ಸರ್ಕಾರ ಬೀಳಿಸುವುದಿಲ್ಲ ಎನ್ನುತ್ತಿದ್ದಾರೆ. ಇನ್ನೊಂದೆಡೆ ಉಪ ಚುನಾವಣೆಯಲ್ಲಿ 15 ಕ್ಷೇತ್ರದಲ್ಲಿ ಬಿಜೆಪಿ ಸೋಲಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದರು.

ಬಿಜೆಪಿ ಹಣ ಬಲದ ಮೂಲಕ ರಾಜಕಾರಣ ಮಾಡುತ್ತಿದೆ ಎಂದಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನಿನ್ನೆ ಹುಣಸೂರಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಸೇರಿದ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿದೆ. ಈ ಹಿಂದಿನ ಸರ್ಕಾರದಲ್ಲಿ ಭ್ರಷ್ಟಾಚಾರ ಮಾಡಿದ ಹಣದಲ್ಲಿ ಚುನಾವಣೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಬರುವುದಿಲ್ಲ ಎಂದರು.
ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗಿದ್ದಾರೆ. ಅವರ ಜೊತೆ ಅವರದೇ ಪಕ್ಷದ ನಾಯಕರೇ ಇಲ್ಲ. ಈ ಕಾರಣಕ್ಕಾಗಿಯೇ ನನ್ನ ಮೇಲೆ ವಾಗ್ದಾಳಿ ನಡೆಸುತ್ತಿದ್ಧಾರೆ ಎಂದು ತಿಳಿಸಿದರು.



